15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಾಲೆಗಳ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ — ಹೋರಾಟಗಾರರ ಆಗ್ರಹ
ಬೆಂಗಳೂರು, ಆಗಸ್ಟ್ 18, 2026: ಕರ್ನಾಟಕ ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳಲ್ಲಿ ಖಾಲಿ ಇರುವ ಉರ್ದು ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ, ಸಾವಿರಾರು ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕು ಎಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಉರ್ದು ಶಿಕ್ಷಕ ಉದ್ಯೋಗಾಕಾಂಕ್ಷಿಗಳು ಹಾಗೂ ಹೋರಾಟಗಾರರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಉರ್ದು ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಉರ್ದು ಶಿಕ್ಷಕ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿ ಮಾತನಾಡಿದ ಹೋರಾಟಗಾರರು, ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮ ಶಾಲೆಗಳಲ್ಲಿರುವ ಖಾಲಿ ಉರ್ದು ಶಿಕ್ಷಕರ ಹುದ್ದೆಗಳನ್ನು ಪರಿಗಣಿಸದಿರುವುದು ಉರ್ದು ಶಿಕ್ಷಕ ಆಕಾಂಕ್ಷಿಗಳಿಗೆ ತೀವ್ರ ಅನ್ಯಾಯವಾಗಿದೆ ಎಂದು ಹೇಳಿದರು.
ರಾಜ್ಯದ ಹಲವು ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳಲ್ಲಿ ಉರ್ದು ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಪರಿಣಾಮ ಬೀರುತ್ತಿದೆ. ಒಂದೆಡೆ ಖಾಲಿ ಹುದ್ದೆಗಳು ವರ್ಷಗಳಿಂದ ಉಳಿದಿದ್ದರೆ, ಮತ್ತೊಂದೆಡೆ ಸಾವಿರಾರು ಅರ್ಹ ಉರ್ದು ಶಿಕ್ಷಕ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಆದ್ದರಿಂದ ಈ ಖಾಲಿ ಹುದ್ದೆಗಳನ್ನು ತಕ್ಷಣ ಗುರುತಿಸಿ, ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಹೋರಾಟಗಾರರ ಮನವಿಯನ್ನು ಸ್ವೀಕರಿಸಿದರು. ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರನ್ನು ಭೇಟಿಯಾಗಿ ವಿಷಯದ ಗಂಭೀರತೆಯನ್ನು ಮನವರಿಕೆ ಮಾಡಿ, ಉರ್ದು ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸರ್ಕಾರ ನೀಡಿರುವ ಭರವಸೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತಂದು, ಉರ್ದು ಮಾಧ್ಯಮ ಶಾಲೆಗಳ ಖಾಲಿ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಯಲ್ಲಿ ಸೇರ್ಪಡೆಗೊಳಿಸಬೇಕು. ಇದರಿಂದ ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ, ಅರ್ಹ ಉರ್ದು ಶಿಕ್ಷಕ ಅಭ್ಯರ್ಥಿಗಳಿಗೆ ನ್ಯಾಯಯುತ ಉದ್ಯೋಗಾವಕಾಶವೂ ದೊರೆಯಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
ಈ ಬೇಡಿಕೆ ಈಡೇರಿಕೆಗಾಗಿ ನಾಳೆಯು ಸಹ (ಆಗಸ್ಟ್ 19ರಂದು) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ “ಚಲೋ ಬೆಂಗಳೂರು” ಹೋರಾಟ ಹಮ್ಮಿಕೊಳ್ಳಲಾಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ ಉರ್ದು ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.
ಉರ್ದು ಶಿಕ್ಷಕರ ಹಕ್ಕುಗಳಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ.
ಈ ಸಂಧರ್ಭದಲ್ಲಿ ಡಾ. ಜಾಹಿದಾ ಖಾನ್, ಜಮೀರ್, ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ಅಸದುಲ್ಲಾ, ಸದಾ ಯೆ ಇತ್ತೆಹಾದ್ ನ ಮುಜಾಹಿದ್ ಬಾಬಾ ಸೇರಿದಂತೆ ಹಲವಾರು ಹೋರಾಟಗಾರು ಉಪಸ್ಥಿತರಿದ್ದರು.
— ಉರ್ದು ಶಿಕ್ಷಕರ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳು ಮತ್ತು ಹೋರಾಟಗಾರರು