ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೫–೨೬ ನೇ ಸಾಲಿನ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಗಳಿಸಿದೆ.
ಇತ್ತೀಚೆಗೆ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದವು.
ಅಂತಿಮ ಪಂದ್ಯದಲ್ಲಿ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ತಂಡ ಹಾಗೂ ರಾಣೆಬೆನ್ನೂರಿನ ಕೆ.ಎಲ್.ಇ. ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯದ ತಂಡ ಮುಖಾಮುಖಿಯಾಗಿದ್ದವು.
ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣನವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರಿ ಬಹುಮಾನಗಳನ್ನು ವಿತರಿಸಿದರು.